105
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಹೆಸರನ್ನು ಆರಾಧಿಸಿರಿ.
ಆತನ ಅದ್ಭುತಕಾರ್ಯಗಳ ಕುರಿತು ಜನಾಂಗಗಳಿಗೆ ಸಾರಿ ಹೇಳಿರಿ.
ಯೆಹೋವನಿಗೆ ಗಾನಮಾಡಿರಿ; ಆತನನ್ನು ಸಂಕೀರ್ತಿಸಿರಿ.
ಆತನ ಮಹತ್ಕಾರ್ಯಗಳ ಕುರಿತು ಕೊಂಡಾಡಿರಿ.
ಆತನ ಪವಿತ್ರ ನಾಮದಲ್ಲಿ ಹೆಮ್ಮೆಪಡಿರಿ.
ಯೆಹೋವನ ಆರಾಧಕರೇ, ಸಂತೋಷಪಡಿರಿ.
ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿಕೊಳ್ಳಿರಿ;
ಸಹಾಯಕ್ಕಾಗಿ ಆತನ ಬಳಿಗೇ ಹೋಗಿರಿ.
ಆತನ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳಿರಿ.
ಆತನ ಮಹತ್ಕಾರ್ಯಗಳನ್ನೂ ವಿವೇಕದ ನಿರ್ಧಾರಗಳನ್ನೂ ಜ್ಞಾಪಿಸಿಕೊಳ್ಳಿರಿ.
ನೀವು ಆತನ ಸೇವಕನಾದ ಅಬ್ರಹಾಮನ ಸಂತತಿಯವರಾಗಿದ್ದೀರಿ;
ಆತನು ಆರಿಸಿಕೊಂಡ ಯಾಕೋಬನ ಸಂತತಿಯವರಾಗಿದ್ದೀರಿ.
ಯೆಹೋವನೇ ನಮ್ಮ ದೇವರು.
ಆತನು ಇಡೀ ಪ್ರಪಂಚವನ್ನು ಆಳುವನು.*
ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು.
ಆತನು ತನ್ನ ಆಜ್ಞೆಗಳನ್ನು ಸಾವಿರ ತಲೆಮಾರುಗಳವರೆಗೂ ಜ್ಞಾಪಿಸಿಕೊಳ್ಳುವನು.
ಆತನು ಅಬ್ರಹಾಮನೊಡನೆ ಒಡಂಬಡಿಕೆ ಮಾಡಿಕೊಂಡನು.
ಆತನು ಇಸಾಕನಿಗೆ ವಾಗ್ದಾನ ಮಾಡಿದನು.
10 ಆತನು ಅದನ್ನು ಯಾಕೋಬನಿಗೆ ಕಟ್ಟಳೆಯನ್ನಾಗಿ ಮಾಡಿದನು.
ದೇವರು ಇಸ್ರೇಲನೊಂದಿಗೆ ತನ್ನ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು.
11 “ನಾನು ನಿನಗೆ ಕಾನಾನ್ ದೇಶವನ್ನು ಕೊಡುವೆನು.
ಆ ದೇಶವು ನಿನ್ನದಾಗಿರುತ್ತದೆ” ಎಂದು ಆತನು ಹೇಳಿದನು.
12 ಅಬ್ರಹಾಮನ ಕುಟುಂಬವು ಚಿಕ್ಕದಾಗಿದ್ದಾಗ
ಅವರು ಪ್ರಯಾಣಿಕರಂತೆ ಕಾನಾನಿನಲ್ಲಿ ವಾಸವಾಗಿದ್ದಾಗ,
ಆತನು ಅವರಿಗೆ ಈ ವಾಗ್ದಾನವನ್ನು ಮಾಡಿದನು.
13 ಅವರು ದೇಶದಿಂದ ದೇಶಕ್ಕೂ
ರಾಜ್ಯದಿಂದ ರಾಜ್ಯಕ್ಕೂ ಪ್ರಯಾಣ ಮಾಡಿದರು.
14 ಆದರೆ ಅವರಿಗೆ ಯಾರಿಂದಲೂ ಅನ್ಯಾಯವಾಗದಂತೆ ನೋಡಿಕೊಂಡನು.
ಅವರನ್ನು ನೋಯಿಸಕೂಡದೆಂದು ಆತನು ರಾಜರುಗಳಿಗೆ ಎಚ್ಚರಿಕೆ ನೀಡಿದನು.
15 “ನಾನು ಆರಿಸಿಕೊಂಡಿರುವ ಜನರಿಗೆ ಕೇಡುಮಾಡಬೇಡಿ.
ನನ್ನ ಪ್ರವಾದಿಗಳಿಗೆ ಯಾವ ಕೆಟ್ಟದ್ದನ್ನೂ ಮಾಡಬೇಡಿ” ಎಂದು ಆತನು ಹೇಳಿದನು.
16 ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು.
ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ.
17 ಆದರೆ ದೇವರು ಒಬ್ಬನನ್ನು ಅವರಿಗಿಂತ ಮುಂಚಿತವಾಗಿ ಕಳುಹಿಸಿಕೊಟ್ಟನು.
ಗುಲಾಮತನಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.
18 ಅವರು ಯೋಸೇಫನ ಕಾಲುಗಳನ್ನು ಹಗ್ಗಗಳಿಂದ ಕಟ್ಟಿದರು;
ಅವನ ಕೊರಳಿಗೆ ಕಬ್ಬಿಣದ ಬೇಡಿಯನ್ನು ಹಾಕಿದರು.
19 ಅವನ ಪ್ರವಾದನೆಯು ನೆರವೇರುವವರೆಗೆ ಅವನು ಗುಲಾಮನಾಗಿದ್ದನು.
ಯೋಸೇಫನು ಸತ್ಯವಂತನೆಂದು ಯೆಹೋವನ ಸಂದೇಶವು ನಿರೂಪಿಸಿತು.
20 ಆದ್ದರಿಂದ ಈಜಿಪ್ಟಿನ ರಾಜನು ಅವನನ್ನು ಬಿಡುಗಡೆ ಮಾಡಿದನು.
ಆ ದೇಶದ ರಾಜನು ಅವನನ್ನು ಸೆರೆಮನೆಯಿಂದ ಬಿಡಿಸಿದನು.
21 ಅರಮನೆಯ ಮೇಲ್ವಿಚಾರಕನನ್ನಾಗಿ ನೇಮಿಸಿದನು.
ರಾಜನ ಆಸ್ತಿಯನ್ನೆಲ್ಲಾ ಯೋಸೇಫನು ನೋಡಿಕೊಂಡನು.
22 ಯೋಸೇಫನು ಇತರ ನಾಯಕರುಗಳಿಗೆ ಸಲಹೆಗಳನ್ನು ಕೊಟ್ಟನು;
ಹಿರಿಯರಿಗೆ ಉಪದೇಶಿಸಿದನು.
23 ಬಳಿಕ ಇಸ್ರೇಲನು ಈಜಿಪ್ಟಿಗೆ ಬಂದನು.
ಯಾಕೋಬನು ಹಾಮನ ದೇಶದಲ್ಲಿ ವಾಸಿಸಿದನು.
24 ಯಾಕೋಬನ ಕುಟುಂಬ ಬಹು ದೊಡ್ಡದಾಯಿತು.
ಅವರು ಈಜಿಪ್ಟಿನವರಿಗಿಂತಲೂ ಬಲಿಷ್ಠರಾದರು.
25 ಆದ್ದರಿಂದ ಈಜಿಪ್ಟಿನವರು ಯಾಕೋಬನ ಕುಟುಂಬವನ್ನು ದ್ವೇಷಿಸತೊಡಗಿದರು.
ಅವರು ತಮ್ಮ ಗುಲಾಮರ ವಿರೋಧವಾಗಿ ಸಂಚುಗಳನ್ನು ಮಾಡತೊಡಗಿದರು.
26 ಆದ್ದರಿಂದ ದೇವರು ತನ್ನ ಸೇವಕನಾದ ಮೋಶೆಯನ್ನೂ
ತಾನು ಆರಿಸಿಕೊಂಡ ಯಾಜಕನಾದ ಆರೋನನನ್ನೂ ಕಳುಹಿಸಿದನು.
27 ಹಾಮನ ದೇಶದಲ್ಲಿ ದೇವರು ಅನೇಕ ಮಹತ್ಕಾರ್ಯಗಳನ್ನು
ಮೋಶೆ ಆರೋನರ ಮೂಲಕವಾಗಿ ಮಾಡಿದನು.
28 ದೇವರು ಕಾರ್ಗತ್ತಲೆಯನ್ನು ಕಳುಹಿಸಿದನು;
ಆದರೂ ಈಜಿಪ್ಟಿನವರು ಆತನಿಗೆ ಕಿವಿಗೊಡಲಿಲ್ಲ.
29 ಆದ್ದರಿಂದ ಆತನು ನೀರನ್ನು ರಕ್ತವನ್ನಾಗಿ ಮಾರ್ಪಡಿಸಿದನು,
ಆಗ ಅವರ ಮೀನುಗಳೆಲ್ಲಾ ಸತ್ತುಹೋದವು.
30 ಬಳಿಕ ಈಜಿಪ್ಟಿನವರ ದೇಶವು ಕಪ್ಪೆಗಳಿಂದ ತುಂಬಿಹೋಯಿತು.
ರಾಜನು ಮಲಗುವ ಕೋಣೆಯಲ್ಲಿಯೂ ಕಪ್ಪೆಗಳಿದ್ದವು.
31 ಆತನು ಆಜ್ಞಾಪಿಸಲು
ವಿಷದ ಹುಳಗಳೂ ಹೇನುಗಳೂ ಬಂದವು.
ಅವು ಎಲ್ಲೆಲ್ಲಿಯೂ ಹರಡಿಕೊಂಡವು.
32 ಆತನು ಮಳೆಯನ್ನು ಕಲ್ಮಳೆಯನ್ನಾಗಿ ಪರಿವರ್ತಿಸಿದನು.
ಅವರ ದೇಶದಲ್ಲಿ ಸಿಡಿಲುಗಳು ಹೊಡೆದವು.
33 ದೇವರು ಅವರ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡಿದನು.
ಅವರ ದೇಶದ ಪ್ರತಿಯೊಂದು ಮರವನ್ನೂ ಆತನು ನಾಶಮಾಡಿದನು.
34 ಆತನು ಆಜ್ಞಾಪಿಸಲು ಮಿಡತೆಗಳೂ
ಜಿಟ್ಟೆಹುಳಗಳೂ ಅಸಂಖ್ಯಾತವಾಗಿ ಬಂದವು.
35 ಮಿಡತೆಗಳೂ ಜಿಟ್ಟೆಹುಳಗಳೂ ದೇಶದಲ್ಲಿದ್ದ ಸಸಿಗಳನ್ನೆಲ್ಲಾ ತಿಂದುಬಿಟ್ಟವು.
ಭೂಮಿಯ ಮೇಲಿದ್ದ ಬೆಳೆಗಳನ್ನೆಲ್ಲಾ ಅವು ತಿಂದುಬಿಟ್ಟವು.
36 ಬಳಿಕ ದೇವರು ಈಜಿಪ್ಟ್ ದೇಶದ
ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಕೊಂದುಹಾಕಿದನು.
37 ಆತನು ತನ್ನ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಹೋದನು.
ಅವರು ತಮ್ಮೊಂದಿಗೆ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಬಂದರು.
ದೇವಜನರಲ್ಲಿ ಯಾರೂ ಎಡವಿಬೀಳಲಿಲ್ಲ.
38 ದೇವಜನರು ಈಜಿಪ್ಟಿನಿಂದ ಹೊರಟಾಗ ಸಂತೋಷಪಟ್ಟರು;
ಯಾಕೆಂದರೆ ಅವರು ದೇವಜನರಿಗೆ ಹೆದರಿಕೊಂಡಿದ್ದರು.
39 ಆತನು ಹಗಲಿನಲ್ಲಿ ನೆರಳಿಗೋಸ್ಕರ ಮೋಡವನ್ನು ಕಂಬಳಿಯಂತೆ ಹರಡಿದನು;
ರಾತ್ರಿಯಲ್ಲಿ ಬೆಳಕಿಗಾಗಿ ಅಗ್ನಿಸ್ತಂಭವನ್ನು ದಯಪಾಲಿಸಿದನು.
40 ಜನರು ಮಾಂಸಕ್ಕಾಗಿ ಕೇಳಿಕೊಂಡಾಗ ಆತನು ಅವರಿಗೆ ಲಾವಕ್ಕಿಗಳನ್ನು ಬರಮಾಡಿದನು;
ಪರಲೋಕದಿಂದ ಮನ್ನವನ್ನು ದಯಪಾಲಿಸಿದನು.
41 ಆತನು ಬಂಡೆಯನ್ನು ಸೀಳಿದಾಗ ನೀರು ಚಿಮ್ಮುತ್ತಾ ಹೊರಬಂದಿತು;
ಅರಣ್ಯದಲ್ಲಿ ನದಿಯು ಹರಿಯತೊಡಗಿತು!
42 ಆತನು ತನ್ನ ಸೇವಕನಾದ ಆಬ್ರಹಾಮನಿಗೆ
ತಾನು ಮಾಡಿದ ವಾಗ್ದಾನವನ್ನು ಜ್ಞಾಪಿಸಿಕೊಂಡನು.
43 ಆತನು ತನ್ನ ಜನರನ್ನು ಈಜಿಪ್ಟಿನಿಂದ ಹೊರತಂದನು.
ಜನರು ಉಲ್ಲಾಸಪಡುತ್ತಾ ಹರ್ಷಗೀತೆಗಳನ್ನು ಹಾಡುತ್ತಾ ಹೊರಬಂದರು!
44 ಅನ್ಯಜನರು ವಾಸವಾಗಿದ್ದ ದೇಶವನ್ನು ದೇವರು ತನ್ನ ಜನರಿಗೆ ಕೊಟ್ಟನು.
ಅನ್ಯಜನರು ದುಡಿದು ಸಂಪಾದಿಸಿದ್ದವುಗಳನ್ನು ದೇವಜನರು ಪಡೆದುಕೊಂಡರು.
45 ತನ್ನ ಜನರು ತನ್ನ ಕಟ್ಟಳೆಗಳಿಗೆ ವಿಧೇಯರಾಗಲೆಂದೂ
ತನ್ನ ಉಪದೇಶಗಳನ್ನು ಎಚ್ಚರಿಕೆಯಿಂದ ಪಾಲಿಸಲೆಂದೂ ಆತನು ಹೀಗೆ ಮಾಡಿದನು.
ಯೆಹೋವನನ್ನು ಕೊಂಡಾಡಿರಿ.

* 105:7: ಯೆಹೋವನೇ … ಆಳುವನು ಅಕ್ಷರಶಃ, “ಆತನ ಆಜ್ಞೆಗಳು ಇಡೀ ಪ್ರಪಂಚದಲ್ಲಿವೆ.”