19
ರಚನೆಗಾರ: ದಾವೀದ.
ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು.
ಗಗನವು ಆತನ ಕೈಕೆಲಸವನ್ನು ತಿಳಿಸುವುದು.
ಪ್ರತಿಯೊಂದು ದಿನವೂ ಅದರ ಕುರಿತು ಹೊಸ ವಿಷಯವನ್ನು ತಿಳಿಸುವುದು.
ಪ್ರತಿಯೊಂದು ರಾತ್ರಿಯೂ ಅದರ ಕುರಿತು ಹೊಸ ಸಂಗತಿಯನ್ನು ಪ್ರಕಟಿಸುವುದು.
ಅವುಗಳ ಮಾತಾಗಲಿ
ನುಡಿಗಳಾಗಲಿ ಸ್ವರವಾಗಲಿ ನಮಗೆ ಕೇಳಿಸದು.
ಆದರೂ ಅವುಗಳ ಸಂದೇಶವು ಭೂಲೋಕದಲ್ಲೆಲ್ಲಾ ಹರಡುತ್ತದೆ;
ಭೂಮಿಯ ಕಟ್ಟಕಡೆಗಳವರೆಗೂ ವ್ಯಾಪಿಸುತ್ತದೆ.
ಆಕಾಶವು ಸೂರ್ಯನಿಗೆ ಮನೆಯಂತಿದೆ.
ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದುಮಗನಂತೆ ಸೂರ್ಯನು ಮುಂಜಾನೆ ಉದಯಿಸುವನು.
ಕ್ರೀಡಾಪಟುವಿನಂತೆ
ಸೂರ್ಯನು ಆಕಾಶದಲ್ಲಿ ಓಡಲಾರಂಭಿಸುವನು.
ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ
ಮತ್ತೊಂದು ಕೊನೆಗೆ ಓಡುತ್ತಾಹೋಗುವನು.
ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು.
ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ.
ಅವು ದೇವಜನರಿಗೆ ಬಲವನ್ನು ಕೊಡುತ್ತವೆ.
ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ.
ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ.
ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ.
ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ.
ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.
ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ;
ಅದು ಶಾಶ್ವತವಾದದ್ದು.
ಯೆಹೋವನ ವಿಧಿಗಳು ಯಥಾರ್ಥವಾಗಿವೆ;
ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.
10 ಆತನ ಉಪದೇಶಗಳು ಬಂಗಾರಕ್ಕಿಂತಲೂ ಅಮ್ಯೂಲ್ಯವಾಗಿವೆ;
ಅಪ್ಪಟವಾದ ಜೇನುತುಪ್ಪಕ್ಕಿಂತಲೂ ಮಧುರವಾಗಿವೆ.
11 ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ;
ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯದಾಗುವುದು.
12 ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ.
ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.
13 ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ.
ಆ ಪಾಪಗಳು ನನ್ನನ್ನು ಆಳದಿರಲಿ.
ನೀನು ಸಹಾಯಮಾಡಿದರೆ
ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ.
14 ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ.
ಯೆಹೋವನೇ, ನೀವೇ ನನ್ನ ಬಂಡೆಯಾಗಿರುವೆ.* ನನ್ನನ್ನು ರಕ್ಷಿಸುವಾತನು ನೀನೇ.

* 19:14: ಬಂಡೆ ಕೆಲವು ಸಲ, ಸೂರ್ಯನ ತಾಪದಿಂದ ತಪ್ಪಿಸಿಕೊಳ್ಳಲು ಜನರು ಆಶ್ರಯಿಸುವ ವಿಶಾಲವಾದ ಬಂಡೆ ಎಂಬರ್ಥವನ್ನು ಇದು ಕೊಡುತ್ತದೆ. ಇನ್ನೂ ಕೆಲವು ಸಲ, ತಮ್ಮ ವೈರಿಗಳಿಂದ ತಪ್ಪಿಸಿಕೊಂಡು ಸಂರಕ್ಷಣೆಗಾಗಿ ಜನರು ಓಡಿಹೋಗುವ ಕೋಟೆ ಎಂಬರ್ಥವನ್ನು ಇದು ಕೊಡುತ್ತದೆ.