32
ರಚನೆಗಾರ: ದಾವೀದ.
1 ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ
ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ
ಅವನೇ ಧನ್ಯನು.
2 ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ
ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ
ಅವನೇ ಧನ್ಯನು.
3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ
ದಿನವೆಲ್ಲ್ಲಾ ಪಾಪದಿಂದ ನರಳಬೇಕಾಯಿತು;
ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು.
4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು.
ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.
5 ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು.
ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ.
ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.
6 ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತ್ತರು ನಿನ್ನಲ್ಲಿ ಪ್ರಾರ್ಥಿಸಲಿ.
ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು.
7 ನೀನು ನನಗೆ ಆಶ್ರಯದುರ್ಗವಾಗಿರುವೆ.
ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ.
ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ.
8 ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವ ಮಾರ್ಗವನ್ನು ಉಪದೇಶಿಸಿ
ಮಾರ್ಗದರ್ಶನ ನೀಡುವೆನು;
ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.
9 ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ.
ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.”
10 ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ.
ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಅವರಿಸಿಕೊಳ್ಳುವುದು.
11 ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ.
ಶುದ್ಧಹೃದಯವುಳ್ಳವರೇ, ಉಲ್ಲಾಸಿಸಿರಿ.