84
ರಚನೆಗಾರರು: ಕೋರಹೀಯರು.
1 ಸೇನಾಧೀಶ್ವರನಾದ ಯೆಹೋವನೇ, ನಿನ್ನ ಆಲಯವು ಎಷ್ಟೋ ರಮ್ಯವಾಗಿದೆ.
2 ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ.
ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.
3 ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ,
ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ.
ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ
ಗೂಡು ಕಟ್ಟಿಕೊಂಡು ಮರಿ ಮಾಡುತ್ತವೆ.
4 ನಿನ್ನ ಆಲಯದಲ್ಲಿ ವಾಸಿಸುವವರು ಭಾಗ್ಯವಂತರೇ ಸರಿ!
ಅವರು ನಿನ್ನನ್ನು ನಿತ್ಯವೂ ಸ್ತುತಿಸುತ್ತಿರುವರು.
5 ನಿನ್ನ ಶಕ್ತಿಯನ್ನೇ ಆಶ್ರಯಿಸಿಕೊಂಡು ಚೀಯೋನ್ ಪರ್ವತಕ್ಕೆ
ಯಾತ್ರಿಕರಾಗಿ ಬರಲು ಬಯಸುವವರು ಎಷ್ಟೋ ಭಾಗ್ಯವಂತರು.
6 ಒರತೆಯನ್ನಾಗಿ ಮಾಡಿರುವ ಬಾಕಾ ಕಣಿವೆಯ ಮೂಲಕ ಅವರು ಪ್ರಯಾಣಮಾಡುವರು.
ಮುಂಗಾರು ಮಳೆಯು ಅದನ್ನು ನೀರಿನ ತೊರೆಗಳಿಂದ ಸಮೃದ್ಧಿಗೊಳಿಸುವುದು.
7 ಜನರು ದೇವರನ್ನು ಸಂದರ್ಶಿಸಲು
ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.
8 ಸೇನಾಧೀಶ್ವರ ಯೆಹೋವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು.
ಯಾಕೋಬನ ದೇವರೇ, ನನ್ನ ಮೊರೆಯನ್ನು ಕೇಳು.
9 ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು.
ನೀನು ಅಭಿಷೇಕಿಸಿದವನಿಗೆ ಕರುಣೆತೋರು.
10 ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ
ನಿನ್ನ ಆಲಯದಲ್ಲಿ ಒಂದು ದಿನವಿರುವುದೇ ಉತ್ತಮ.
ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ
ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ.
11 ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ.
ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು.
ಆತನು ಎಲ್ಲಾ ಒಳ್ಳೆಯವುಗಳನ್ನು
ತನ್ನ ಭಕ್ತರಿಗೆ ಕೊಡುವನು.
12 ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವವರು ಭಾಗ್ಯವಂತರೇ ಸರಿ!